ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ

ಕಳೆದ ಎರಡು ತಿಂಗಳಿಂದ ಕೊರೊನಾ ನಿಯಂತ್ರಣದಲ್ಲಿ ನಿರತರಾಗಿದ್ದ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಈಗ ಸ್ವಪಕ್ಷೀಯರಿಂದಲೇ ಹೊಸ ಸಂಕಷ್ಟ ಎದುರಾಗಿದೆ. ಬೆಂಗಳೂರಿನಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಬಿಜೆಪಿ ಶಾಸಕರ ಪ್ರತ್ಯೇಕ ಸಭೆ ನಡೆಸಿದ್ದು ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಳ್ಳುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ .

ಬೆಂಗಳೂರಿನಲ್ಲಿ  ಬಿಜೆಪಿಯ ಹಿರಿಯ ನಾಯಕ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಬಿಜೆಪಿ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಮಹತ್ವದ ರಾಜಕೀಯ ಬೆಳವಣಿಗೆಯಾಗಿದೆ.


ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಭೆ ಸೇರಿದ್ದ ಶಾಸಕರು ಮುಖ್ಯಮಂತ್ರಿ B.S ಯಡಿಯೂರಪ್ಪ ಹಾಗೂ ಬಿಜೆಪಿ ಸರಕಾರದ ಕಾರ್ಯವೈಖರಿ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಭಾಗವಹಿಸಿದ್ದ ಹಲವು ಶಾಸಕರು ಸಿಎಂ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮುಖ್ಯಮಂತ್ರಿಯವರು ಪಕ್ಷದ ಶಾಸಕರನ್ನು ಭೇಟಿಯಾಗುತ್ತಿಲ್ಲ. ಕ್ಷೇತ್ರದ ಅಹವಾಲುಗಳನ್ನು ಹೇಳಿಕೊಂಡು ಅನುದಾನ, ವರ್ಗಾವಣೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ತೆರಳಿದರೆ ಸೂಕ್ತ ಪ್ರತಿಕ್ರಿಯೆ ಸಿಗುತ್ತಿಲ್ಲ,” ಎಂದು ಆಕ್ರೋಶಗೊಂಡಿರುವ ಶಾಸಕರು ರಾಜ್ಯ ಸರಕಾರದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ವರಿಷ್ಟರನ್ನು ‌ ಭೇಟಿಯಾಗಿ ಮನವರಿಕೆ ಮಾಡಿಕೊಡಲು ನಿರ್ಧರಿಸಿದ್ದಾರೆ.

ಹಿರಿಯ ಶಾಸಕ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಉಮೇಶ್‌ ಕತ್ತಿ, ಸಿದ್ದು ಸವದಿ ಸೇರಿದಂತೆ ಬೆಳಗಾವಿ ಹಾಗೂ ಕಲಬುರಗಿ ಜಿಲ್ಲೆಯ ಕೆಲವು ಶಾಸಕರು ಸಭೆ ಸೇರಿದ್ದು ನಿಜ ಎಂದು ಪಕ್ಷದ ಶಾಸಕರೊಬ್ಬರು ಸ್ಪಷ್ಟಪಡಿಸಿದರು. ಆದರೆ, ತಾವು ಆ ಸಭೆಯಲ್ಲಿ ಭಾಗವಹಿಸಿಲ್ಲ, ಅವರೊಂದಿಗೆ ಸಂಪರ್ಕದಲ್ಲಿಯೂ ಇಲ್ಲ ಎಂದು ಈ ಶಾಸಕರು ಹೇಳಿದ್ದಾರೆ.

Leave a Reply

Your email address will not be published. Required fields are marked *